Updated By: Priyalachhi
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ದೇಗುಲದಲ್ಲಿ ಶನಿವಾರ ಘೋರ ದುರಂತ ಸಂಭವಿಸಿದೆ. ಶ್ರೀಕಾಕುಳಂನ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾಗ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ. ಹತ್ತಾರು ಮಂದಿ ಭಕ್ತರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.
ಹೈದರಾಬಾದ್, ನವೆಂಬರ್ 1: ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ (Andhra Pradesh) ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ ಎಂದು ಆಂಧ್ರ ಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಪರಿಸ್ಥಿತಿ ನಿಯಂತ್ರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ದೇವಾಲಯಕ್ಕೆ ತಲುಪಿ ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಸಿಎಂ ಚಂದ್ರಬಾಬು ನಾಯ್ಡು ಸಂತಾಪ
‘ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತದಲ್ಲಿ ಭಕ್ತರ ಸಾವು ಅತೀವ ವೇದನೆ ಉಂಟುಮಾಡಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರಿಗೆ ತ್ವರಿತವಾಗಿ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ವಿನಂತಿಸಿದ್ದೇನೆ’ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.




