Updated By: Priyalachhi
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆ ಆಗದಂತೆ ಅಭಿವೃದ್ಧಿಪಡಿಸಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ ಇಂದು ಚಾಮುಂಡಿ ಬೆಟ್ಟದ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗಿದೆ. ನಿವಾಸಿಗಳ ಸಲಹೆಯಂತೆ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.



