Updated By: Priyalachhi
ಬೆಂಗಳೂರು: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಯಲ್ಲಿ ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದ್ದರು.
“ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದ್ದರು.
ವಿಬಿ-ಜಿ ರಾಮ್ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು.
ಇಂದು ಸಹ ವಿಧಾನಸಭೆಯಲ್ಲಿ ನಿರ್ಣಯದ ಮೇಲೆ ಚರ್ಚೆ ಮುಂದುವರೆಯಿತು. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.



