Updated By: Priyalachhi
ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಕೋಲಾರ ಹೊರವಲಯದ ತೋಟಗಾರಿಕಾ ವಿವಿ ಕ್ಯಾಂಪಸ್ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಏಜೆಂಟ್ಗಳನ್ನು ಪೊಲೀಸರು ತಪಾಸಣೆ ಮಾಡಿ ಒಳಗೆ ಬಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮತ ಎಣಿಕೆ ಕೇಂದ್ರಕ್ಕೆ ಏಜೆಂಟ್ಗಳು ಪ್ರವೇಶ ಪಡೆದರು. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಫೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿಷೇಧ ಮಾಡಲಾಗಿದೆ. ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ.
ಮತ ಎಣಿಕೆ ಕೇಂದ್ರ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.
ಮಾಲೂರು ಶಾಸಕ ನಂಜೇಗೌಡ ಆಯ್ಕೆ ರದ್ದುಪಡಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಕ್ಟೋಬರ್ 14 ರಂದು ತಡೆ ನೀಡಿತ್ತು.
ತಮ್ಮ ಶಾಸಕ ಸ್ಥಾನವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ, ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತ್ತು.
ಮರು ಮತ ಎಣಿಕೆಗೆ ಸೂಚನೆ: ಶಾಸಕ ಸ್ಥಾನ ರದ್ದತಿಗೆ ತಡೆ ನೀಡಿದ್ದರೂ, ಮರು ಮತ ಎಣಿಕೆ ನಡೆಸುವಂತೆ ನ್ಯಾಯಪೀಠ ಸೂಚಿಸಿದೆ. ಹೈಕೋರ್ಟ್ ಆದೇಶದಂತೆ 2023ರ ಫಲಿತಾಂಶವನ್ನು ಮರು ಎಣಿಕೆ ಮಾಡಬೇಕು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಬೇಕು. ಕೋರ್ಟ್ ಅನುಮತಿಯ ಹೊರತಾಗಿ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಆದೇಶದಲ್ಲಿ ತಿಳಿಸಿತ್ತು.



