ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

0
51

Updated By: Priyalachhi

ಬೆಂಗಳೂರು: ಕೇರಳ ರಾಜ್ಯದಲ್ಲಿರುವ ಪುಣ್ಯಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಕಳೆದ ಭಾನುವಾರದಿಂದ ಭಕ್ತರಿಗೆ ತೆರೆಯಲಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಲಕ್ಷಾಂತರ ಮಂದಿಯ ಭಕ್ತಸಾಗರವೇ ಹರಿದು ಬರುತ್ತಿದೆ. ಮತ್ತೊಂದೆಡೆ ಕೇರಳದಲ್ಲಿ ವೈರಸ್​ ಭೀತಿ ಕಾಡುತ್ತಿದೆ.

ಮೆದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತಂತೆ ರಾಜ್ಯದಿಂದ ತೆರಳಿರುವ ಅಯ್ಯಪ್ಪ ಭಕ್ತ ಮಾಲಾಧಾರಿಗಳಿಗೆ ಸುರಕ್ಷತಾ ಸಲಹಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದೆ.

ಆರೋಗ್ಯ ಇಲಾಖೆಯ ಸಲಹೆ-ಸೂಚನೆಗಳು: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಮಾಹಿತಿ ನೀಡಿದೆ.

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳಿರುತ್ತವೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೇಗ್ಲೇರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ. ಆದ್ದರಿಂದ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಇಲಾಖೆಯು ಎಚ್ಚರಿಸಿದೆ.

ಕಾಯಿಲೆಯ ಲಕ್ಷಣಗಳೇನು? ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಯಲ್ಲಿ ಬದಲಾವಣೆ ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here