SC – ST ಮೀಸಲಾತಿ ಹೆಚ್ಚಳ: ನೇಮಕಾತಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​

0
40

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50 ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ – 2022 ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ‌ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯಿದೆ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅಲ್ಲದೇ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡಿದ್ದು, ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿದೆ. ಹೈಕೋರ್ಟ್​ನ ಈ ಆದೇಶದಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಅವಕಾಶ ಸಿಕ್ಕಂತಾಗಿದೆ.

ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ. ಕಾಯಿದೆಯ ಅನ್ವಯ ಈಗಾಗಲೇ ಆರಂಭಿಸಿರುವ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆಯು ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಈ ವಿಚಾರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಹಕ್ಕು ದೊರೆಯುವುದಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

sambrama prabha editor suresh kt

LEAVE A REPLY

Please enter your comment!
Please enter your name here