Updated By: Priyalachhi
ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು.
“ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ” ಎಂದು ಕಿಡಿಕಾರಿದರು. ಮುಂಬರುವ 27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು” ಎಂದರು.
ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಮಂಗಳವಾರ ಸಭೆ ಕರೆದಿದ್ದಾರೆ. ಇಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರ್ಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ” ಎಂದರು. ಸರ್ಕಾರ ಮತ್ತು ಪಕ್ಷ ಒಟ್ಟಾಗಿ ನರೇಗಾ ಯೋಜನೆಯ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ವಿರೋಧಿಸಿ ಹೋರಾಟ ಮಾಡುತ್ತೇವೆ. ಇದು ರಾಷ್ಟ್ರೀಯ ವಿಚಾರ. ಈ ದೇಶದ ಗ್ರಾಮ ಪಂಚಾಯತಿಗಳನ್ನು ಸುಭದ್ರಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ರಾಜೀವ್ ಗಾಂಧಿ ಅವರು ತಂದ 73,74 ನೇ ತಿದ್ದುಪಡಿ ಮೂಲಕ ಅಧಿಕಾರ ವಿಕೇಂದ್ರೀಕರಣ ಮಾಡಿದರು” ಎಂದರು.



